
ಪ್ರತಿಧ್ವನಿ ಯಲ್ಲಾಪುರ: ಮಂಗಳೂರಿನಲ್ಲಿ ಪ್ರಸ್ತಾಪಿಸಲಾಗಿರುವ ಹೈಕೋರ್ಟ್ ಸಂಚಾರಿ ಪೀಠಕ್ಕೆ ಉತ್ತರ ಕನ್ನಡ ಜಿಲ್ಲೆಯನ್ನು ಸೇರ್ಪಡೆ ಮಾಡುವ ಪ್ರಸ್ತಾವನೆಗೆ ಶಾಸಕ ಶಿವರಾಮ ಹೆಬ್ಬಾರ್ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈ ಸಂಬಂಧ ಉತ್ತರ ಕನ್ನಡ ಜಿಲ್ಲಾ ಬಾರ್ ಅಸೋಸಿಯೇಷನ್ ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿರುವ ಹೋರಾಟಕ್ಕೆ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ.

ಈ ಕುರಿತು ವಿಡಿಯೋ ಸಂದೇಶದ ಮೂಲಕ ಪ್ರತಿಕ್ರಿಯಿಸಿರುವ ಶಾಸಕ ಶಿವರಾಮ ಹೆಬ್ಬಾರ್ ಅವರು, ಉತ್ತರ ಕನ್ನಡ ಜಿಲ್ಲೆಯನ್ನು ಮಂಗಳೂರು ಸಂಚಾರಿ ಪೀಠದ ವ್ಯಾಪ್ತಿಗೆ ಸೇರ್ಪಡೆಗೊಳಿಸುವ ಪ್ರಸ್ತಾವನೆ ಜಿಲ್ಲೆಯ ಜನರಿಗೆ ಅನಾನುಕೂಲ ಉಂಟುಮಾಡಲಿದೆ ಎಂದು ತಿಳಿಸಿದ್ದಾರೆ.
“ಉತ್ತರ ಕನ್ನಡ ಜಿಲ್ಲೆಯ ಜನರ ಹಿತದೃಷ್ಟಿಯಿಂದ ಈ ಪ್ರಸ್ತಾವನೆಯನ್ನು ನಾನು ತೀವ್ರವಾಗಿ ವಿರೋಧಿಸುತ್ತೇನೆ. ಮುಖ್ಯ ನ್ಯಾಯಮೂರ್ತಿಗಳು ಹಾಗೂ ರಾಜ್ಯದ ಮುಖ್ಯಮಂತ್ರಿಗಳು ಉತ್ತರ ಕನ್ನಡ ಜಿಲ್ಲೆಯ ಶಾಸಕರು ಮತ್ತು ಜಿಲ್ಲಾ ಬಾರ್ ಅಸೋಸಿಯೇಷನ್ನ ಪದಾಧಿಕಾರಿಗಳೊಂದಿಗೆ ಚರ್ಚಿಸಿ, ಜಿಲ್ಲೆಯ ಜನರಿಗೆ ನ್ಯಾಯ ದೊರೆಯುವ ರೀತಿಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು” ಎಂದು ಅವರು ಆಗ್ರಹಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯನ್ನು ಮಂಗಳೂರು ಪೀಠದ ವ್ಯಾಪ್ತಿಗೆ ಸೇರಿಸಿದರೆ ಜಿಲ್ಲೆಯ ದೂರದ ಪ್ರದೇಶಗಳ ಜನರು ನ್ಯಾಯಾಂಗ ಸೇವೆ ಪಡೆಯಲು ಸುಮಾರು 400 ಕಿಲೋಮೀಟರ್ವರೆಗೆ ಪ್ರಯಾಣಿಸಬೇಕಾದ ಪರಿಸ್ಥಿತಿ ಎದುರಾಗಬಹುದು. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಸಮಯ, ಹಣ ಹಾಗೂ ಪ್ರಯಾಣದ ತೊಂದರೆ ಉಂಟಾಗುವ ಸಾಧ್ಯತೆಯಿದೆ.
ಆದ್ದರಿಂದ ಜಿಲ್ಲೆಯ ಭೌಗೋಳಿಕ ವ್ಯಾಪ್ತಿ, ಜನರ ಅನುಕೂಲ ಹಾಗೂ ನ್ಯಾಯಾಂಗ ಸೇವೆ ಪಡೆಯುವ ಹಕ್ಕನ್ನು ಪರಿಗಣಿಸಿ ಯಾವುದೇ ನಿರ್ಧಾರ ಕೈಗೊಳ್ಳಬೇಕು. ಉತ್ತರ ಕನ್ನಡ ಜಿಲ್ಲೆಯ ಜನರ ಹಿತಕ್ಕೆ ಧಕ್ಕೆ ತರುವ ಯಾವುದೇ ಪ್ರಸ್ತಾವನೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಶಾಸಕ ಶಿವರಾಮ ಹೆಬ್ಬಾರ್ ಅವರು ಸ್ಪಷ್ಟಪಡಿಸಿದ್ದಾರೆ.















Prathidvani Yellapura