
ಪ್ರತಿಧ್ವನಿ ಯಲ್ಲಾಪುರ : ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಬೆಳೆಸುವ ಮೂಲಕ ಅವರ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ, ಕ್ರೀಡೆಯಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವ ಮನೋಭಾವ, ಶಿಸ್ತು, ಸಮಯಪಾಲನೆ ಹಾಗೂ ತಂಡದ ಸ್ಫೂರ್ತಿ ಮುಖ್ಯವಾಗಿದ್ದು, ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಅವರು ಶನಿವಾರ ಪಟ್ಟಣದ ಕಾಳಮ್ಮನಗರ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ, ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ರೇಖಾ ನಾಯ್ಕ್, ಪಂಚ ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಉಲ್ಲಾಸ ಶಾನಬಾಗ್, ಬಾರತ ಸೇವಾದಳ ಪ್ರಮುಖ ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ, ಸರ್ಕಾರಿ ನೌಕರ ಸಂಘದ ತಾಲೂಕು ಅಧ್ಯಕ್ಷ ಸಂಜೀವ್ ಕುಮಾರ್ ಹೊಸಕ್ಕೇರಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಆರ್.ಭಟ್, ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಶಿಕ್ಷಕ ಸುಧಾಕರ ನಾಯಕ್, ಅನುದಾನಿತ ಶಿಕ್ಷಕ ಸಂಘದ ಅಧ್ಯಕ್ಷ ಅಜಯ್ ನಾಯಕ್, ದೈಹಿಕ ಶಿಕ್ಷಕ ಪರುವೀಕ್ಷಕ ಪ್ರಕಾಶ್ ತಾರಿಕೊಪ್ಪ ಸೇರಿದಂತೆ ತಾಲೂಕಿನ ವಿವಿಧ ಶಾಲೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.










Prathidvani Yellapura