
ಪ್ರತಿಧ್ವನಿ ಯಲ್ಲಾಪುರ : ಸುಮಾರು ₹8.68 ಕೋಟಿ ವೆಚ್ಚದಲ್ಲಿ ಕೆರೆಗಳಿಗೆ ನೀರು ತುಂಬಿಸುವ ಬೃಹತ್ ಯೋಜನೆಯ ಕಾಮಗಾರಿ ನಡೆಯುತ್ತಿದ್ದು, ನಾಲ್ಕು ಕೆರೆಗಳಿಗೆ ನೀರು ತುಂಬಿಸುವ ಮೂಲಕ 251 ಹೆಕ್ಟೇರ್ ಪ್ರದೇಶದ ರೈತರಿಗೆ ಹಾಗೂ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ ಎಂದು ಯೋಜನೆಗಾಗಿ ಶತ ಪ್ರಯತ್ನಪಟ್ಟು ಹಣ ಮಂಜೂರು ಮಾಡಿಸಿದ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಅವರು ಮದನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲಗೋಡ ಗ್ರಾಮದಲ್ಲಿ ಕೆರೆಗಳಿಗೆ ನೀರು ತುಂಬಿಸುವ ಉದ್ದೇಶದಿಂದ ಕೈಗೆತ್ತಿಕೊಳ್ಳಲಾಗಿರುವ ನೀರಾವರಿ ಯೋಜನೆಯ ಕಾಮಗಾರಿಯನ್ನು ವೀಕ್ಷಿಸಿ ಪರಿಶೀಲಿಸಿ ಮಾತನಾಡಿದರು.

ಯೋಜನೆಯಿಂದ ದೊರೆಯುವ ನೀರನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಗ್ರಾಮಸ್ಥರು ಸಮಿತಿಯನ್ನು ರಚಿಸಿಕೊಂಡು, ಕೆರೆಗಳಿಗೆ ನೀರು ಹರಿಸುವ ಹಾಗೂ ನೀರಿನ ಬಳಕೆಯನ್ನು ನಿಯಂತ್ರಿಸುವ ಕಾರ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಶಾಸಕರು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದ ಶಾಸಕರು, ಅಧಿಕಾರಿಗಳಿಂದ ಯೋಜನೆಯ ಕುರಿತು ಮಾಹಿತಿ ಪಡೆದು, ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಗತ್ಯ ಸಲಹೆ–ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮಾಜಿ ಸದಸ್ಯ ವಿಜಯ ಮಿರಾಶಿ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿ.ಎಸ್.ಭಟ್ ಸೇರಿದಂತೆ ಪಕ್ಷದ ವಿವಿಧಸ್ಥರದ ಪದಾಧಿಕಾರಿಗಳು, ಗ್ರಾಮಸ್ಥರು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.












Prathidvani Yellapura