
ಪ್ರತಿಧ್ವನಿ ಯಲ್ಲಾಪುರ : ರಾಜ್ಯದಲ್ಲಿ ತಂಬಾಕು ಅಥವಾ ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ವಿಧಿಸಿರುವ ಒಂದು ವರ್ಷದ ಕಟ್ಟುನಿಟ್ಟಿನ ನಿಷೇಧದ ಆದೇಶವನ್ನು ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಆರೋಗ್ಯದ ದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ನಿಷೇಧ ಹೇರಲಾಗಿದೆ. ಈ ನಿರ್ಧಾರದಿಂದ ಅಡಿಕೆ ಬೆಳೆಗಾರರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಹೇಳಿದರು.
ನಿಷೇಧದ ಆದೇಶವನ್ನು ಸರ್ಕಾರ ಹಿಂದಕ್ಕೆ ಪಡೆಯಲಿದೆ ಎಂಬ ಮಾತುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿದ ಅವರು, “ನಾನು ಹೊರಡಿಸಿದ ಆದೇಶವನ್ನು ವಾಪಸ್ ಪಡೆದಿಲ್ಲ” ಎಂದು ತಿಳಿಸಿದರು.

ಅಡಿಕೆ ಬೆಳೆಗಾರರು ಹಾಗೂ ರೈತರ ಹಿತಾಸಕ್ತಿಗೆ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ. ಅಡಿಕೆಗೆ ಯಾವುದೇ ತೊಂದರೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗುವುದು. ಗುಟ್ಕಾ ತಯಾರಿಕೆಗೆ ದೇಶೀಯ ಅಡಿಕೆಯನ್ನು ಬಳಸುವುದಿಲ್ಲವಾದರೆ ನೇಪಾಳ, ಬಾಂಗ್ಲಾದೇಶ ಸೇರಿದಂತೆ ಇತರೆ ದೇಶಗಳಿಂದ ಅಡಿಕೆ ಆಮದು ಮಾಡಿಕೊಳ್ಳುವ ಸಾಧ್ಯತೆಯಿದೆ. ಇದರಿಂದ ಅಡಿಕೆಯ ಬೆಲೆ ಹೆಚ್ಚಾಗುವ ಸಾಧ್ಯತೆಯೂ ಇದೆ ಎಂದು ಸಚಿವರು ಅಭಿಪ್ರಾಯಪಟ್ಟರು.
ಆರೋಗ್ಯದ ದೃಷ್ಟಿಯಿಂದ ಗುಟ್ಕಾ ಮತ್ತು ನಿಕೋಟಿನ್ಯುಕ್ತ ಪಾನ್ ಮಸಾಲಾ ಮೇಲಿನ ನಿಷೇಧ ಉತ್ತಮ ನಿರ್ಧಾರವಾಗಿದ್ದು, ಈ ವಿಚಾರದಲ್ಲಿ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಸ್ಪಷ್ಟನೆ ನೀಡಲಾಗಿದೆ ಎಂದು ಯು.ಟಿ. ಖಾದರ್ ತಿಳಿಸಿದರು.
ಅಡಿಕೆ ಬೆಳೆಗಾರರಿಗೆ ಹಾಗೂ ವ್ಯಾಪಾರಿಗಳಿಗೆ ಯಾವುದೇ ತೊಂದರೆ ಆಗದಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ಭರವಸೆ ನೀಡಿದರು.

















Prathidvani Yellapura